ಮೊಬೈಲ್ ಟವರ್ ನಿರ್ಮಾಣಕ್ಕೆ ಸಾರ್ವಜನಿಕರ ವಿರೋಧ: ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ ಸೋಮಶೇಖರ ರೆಡ್ಡಿ.
ಬಳ್ಳಾರಿ: ನಗರದ ಪಟೇಲ್ ನಗರದ ಸತ್ಯಸಾಯಿ ನಗರ ಪ್ರದೇಶದಲ್ಲಿ ಮೊಬೈಲ್ ಟವರ್ ನಿರ್ಮಾಣ ಕಾಮಗಾರಿಗೆ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿ, ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಘಟನೆ ನಡೆದಿದೆ.
ಮೊಬೈಲ್ ಟವರ್ ನಿರ್ಮಾಣದಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಬಹುದು ಎಂಬ ಆತಂಕವನ್ನು ಸ್ಥಳೀಯ ನಿವಾಸಿಗಳು ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕೆ ಕಾಮಗಾರಿ ಆರಂಭವಾಗುತ್ತಿದ್ದಂತೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿ ಅದನ್ನು ತಡೆದಿದ್ದಾರೆ.
ಸ್ಥಳೀಯರ ಮನವಿಯ ಮೇರೆಗೆ ಮಾಜಿ ಶಾಸಕ ಸೋಮಶೇಖರ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಅವರು, ಮೊಬೈಲ್ ಟವರ್ ನಿರ್ಮಾಣಕ್ಕೆ ಸಂಬಂಧಿಸಿದ ಎಲ್ಲಾ ಅಂಶಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಮೊಬೈಲ್ ಟವರ್ನಿಂದ ಉಂಟಾಗಬಹುದಾದ ಆರೋಗ್ಯ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಆತಂಕ ಮುಂದುವರಿದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಾಮಗಾರಿ ನಿಯಮಾನುಸಾರ ನಡೆಯುತ್ತಿದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.














