ಬಕ್ರೀದ್ ಅಂಗವಾಗಿ ಈದ್ಗಾ ಮೈದಾನದಲ್ಲಿ ವಿಶೇಷ ನಮಾಜ್
ಬಳ್ಳಾರಿ, ಮೇ 28: ಪವಿತ್ರ ಬಕ್ರೀದ್ ಹಬ್ಬದ ಅಂಗವಾಗಿ ನಗರದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ವಿಶೇಷ ನಮಾಜ್ ಸಲ್ಲಿಸಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಿದರು. ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ Syed Naseer Hussain ಅವರು ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು, “ಬಕ್ರೀದ್ ಹಬ್ಬವು ತ್ಯಾಗ, ದಯೆ, ಮಾನವೀಯತೆ ಹಾಗೂ ಸಹೋದರತ್ವದ ಸಂದೇಶವನ್ನು ಸಾರುವ ಪವಿತ್ರ ಹಬ್ಬವಾಗಿದೆ. ದೇಶದಲ್ಲಿ ಏಕತೆ, ರಾಜ್ಯದ ಅಭಿವೃದ್ಧಿ ಹಾಗೂ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ಸದಾ ನೆಲೆಸಿರಲಿ” ಎಂದು ಪ್ರಾರ್ಥಿಸಿದರು.
ಸಮಸ್ತ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಅವರು, “ಎಲ್ಲರ ಜೀವನದಲ್ಲಿ ಸುಖ, ಸಮೃದ್ಧಿ ಮತ್ತು ಸಂತೋಷ ನೆಲೆಸಲಿ” ಎಂದು ಹಾರೈಸಿದರು.
ನಗರದ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂ ಬಾಂಧವರು ಸೇರಿ ಸಮೂಹ ಪ್ರಾರ್ಥನೆ ಸಲ್ಲಿಸಿದ್ದು, ಹಬ್ಬದ ಸಂಭ್ರಮ ಮನೆಮಾಡಿತ್ತು.